ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರಕರಣಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಿ : ಡಾ: ಹೆಚ್ ಎನ್ ಗೋಪಾಲಕೃಷ್ಣ
- TV10 Kannada Exclusive
- March 21, 2023
- No Comment
- 116
ಮಂಡ್ಯ,ಮಾ, 21-ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯಗಳಡಿ ದಾಖಲಾಗುವ ಪ್ರಕರಣಳ ಶೀಘ್ರ ವಿಲೇವಾರಿಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ: ಹೆಚ್ ಎನ್ ಗೋಪಾಲಕೃಷ್ಣ ಅವರು ಸೂಚಿಸಿದರು.
ಮಂಡ್ಯದ ಜಿಲ್ಲಾ ಪಂಚಾಯತ್ ಕಚೇರಿಯ ಕಾವೇರಿ ಸಭಾಂಗಣದಲ್ಲಿ ನಡೆದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ (ದೌರ್ಜನ್ಯ ಪ್ರತಿಬಂಧ ) ತಿದ್ದುಪಡಿ ಕಾಯ್ದೆ -2015 ಹಾಗೂ ತಿದ್ದುಪಡಿ ನಿಯಮಗಳು -2016 ಅನ್ನು ಅನುಷ್ಟಾನಗೊಳಿಸುವ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮದ್ದೂರು ತಾಲ್ಲೂಕಿನಲ್ಲಿ 42 ಜನ ಜೀತದಾಳು ಇರುತ್ತಾರೆ ಎಂದು ಜಿಲ್ಲಾ ಜಾಗೃತ ಸಮಿತಿ ಸದಸ್ಯ ವೆಂಕಟಗಿರಿಯಯ್ಯ ಅವರು ತಿಳಿಸಿದಾಗ, ಇವರನ್ನು ಬಿಡುಗಡೆ ಮಾಡಿ ಪುನರ್ವಸತಿ ಕಲ್ಪಿಸಲು, ವಿವಿಧ ಇಲಾಖೆಗಳಿಂದ ನೀಡಲಾಗುವ ಸೌಲಭ್ಯಗಳ ಬಗ್ಗೆ ತರಬೇತಿ ನೀಡಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಪರಿಶಿಷ್ಟ ಜಾತಿ ಜನಾಂಗದ ಮೀನುಗಾರರಿಗೆ ಸಹಕಾರ ಸಂಘದ ಸದಸ್ಯತ್ವ ಒದಗಿಸಿ ಕೆ.ಆರ್.ಎಸ್ ಮೀನುಗಾರಿಕೆ ತರಬೇತಿ ಕೇಂ ದ್ರದಿಂದ ತರಬೇತಿ ನೀಡಿದರೆ ಅವರಿಗೆ ಮೀನುಗಾರಿಕೆ ಇಲಾಖೆಯಿಂದ ಎಸ್.ಸಿ.ಪಿ ಅನುದಾನದಡಿ ನೀಡಲಾಗುವ ಸೌಲಭ್ಯ ಒದಗಿಸಬಹುದು ಎಂದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆಯುತ್ತಿರುವ ಬಗ್ಗೆ ಸಭೆಯಲ್ಲಿ ಚರ್ಚಿಸಿದಾಗ ಈ ಬಗ್ಗೆ ದೂರುಗಳು ಬಂದಲ್ಲಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಜಾತಿ ಪ್ರಮಾಣ ಪತ್ರ ನೀಡುವಾಗ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಎಚ್ಚರಿಕೆಯಿಂದ ಹಾಗೂ ಸರ್ಕಾರದ ನಿರ್ದೇಶನದಂತೆ ಕಾರ್ಯನಿರ್ವಹಿಸಬೇಕು ಎಂದು ಎಚ್ಚರಿಕೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್ ಅವರು ಮಾತನಾಡಿ ಜಿಲ್ಲೆಯ ಪೋಲಿಸ್ ಠಾಣೆಯಲ್ಲಿ ದಾಖಲಾಗಿರುವ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಪ್ರಕರಣಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲು ಪೋಲಿಸ್ ಸಿಬ್ಬಂದಿಗಳಿಗೆ ಮತ್ತು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.
ಸಭೆಯಲ್ಲಿ ಜಿಲ್ಲಾ ಜಾಗೃತ ಸಮಿತಿ ಸದಸ್ಯರಾದ ಗುರುಪ್ರಸಾದ್ ಕೆರಗೋಡು, ಅಮ್ಜದ್ ಪಾಷ್, ಚಂದ್ರಶೇಖರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತ ಎಲ್ ಹುಲ್ಮನಿ, ಉಪವಿಭಾಗಾಧಿಕಾರಿ ಕೀರ್ತನಾ, ನಂದೀಶ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಸಂಜೀವಪ್ಪ, ಜಿಲ್ಲಾ ವಾರ್ತಾ ಮತ್ತು ಪ್ರಚಾರ ಅಧಿಕಾರಿ ಎಸ್. ಎಚ್ ನಿರ್ಮಲಾ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.