ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಪರೀಕ್ಷ ಅಕ್ರಮ ನಡೆಯದಂತೆ ಎಚ್ಚರವಹಿಸಿ: ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ
- TV10 Kannada Exclusive
- March 23, 2023
- No Comment
- 143
ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಪರೀಕ್ಷ ಅಕ್ರಮ ನಡೆಯದಂತೆ ಎಚ್ಚರವಹಿಸಿ: ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ
ಮಂಡ್ಯ,ಮಾ,23:-ಜಿಲ್ಲೆಯಲ್ಲಿ ಮಾರ್ಚ್ 31 ರಿಂದ ಏಪ್ರಿಲ್ 15 ರವರೆಗೆ ನಡೆಯಲಿರುವ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಯಾವುದೇ ಪರೀಕ್ಷಾ ಅಕ್ರಮ ನಡೆಯದಂತೆ ಎಚ್ಚರವಹಿಸಿ ಎಂದು ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ ಅವರು ತಿಳಿಸಿದರು.
ಅವರು ಇಂದು ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ ಸಂಬಂಧ ಪೂರ್ವಭಾವಿ ಸಭೆನಡೆಸಿ ಮಾತನಾಡಿದರು.
ಅಧಿಕಾರಿಗಳು ಎಸ್.ಎಸ್.ಎಲ್.ಸಿ ಬೋರ್ಡ್ ಸೂಚನೆಯನ್ನು ಪಾಲನೆ ಮಾಡಿ ಪರೀಕ್ಷೆ ನಡೆಸಿ, ಯಾವುದೇ ಆಕ್ರಮಗಳು ನಡೆಯದಂತೆ ಕ್ರಮವಹಿಸಿ. ಅಕ್ರಮ ನಡೆದಿದ್ದು ಗಮನಕ್ಕೆ ಬಂದರೆ ಅಂತಹ ಅಧಿಕಾರಗಳ ವಿರುದ್ಧ ಶಿಸ್ತು ಕ್ರಮಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಕಳೆದ ಬಾರಿ ಜಿಲ್ಲೆಯ ಫಲಿತಾಂಶ ರಾಜ್ಯದಲ್ಲಿ 3ನೇ ಸ್ಥಾನದಲ್ಲಿದ್ದು, ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಈ ಬಾರಿ ಪ್ರಥಮ ಸ್ಥಾನ ತಲುಪಬೇಕಿದೆ ಎಂದರು.
ಜಿಲ್ಲೆಯಲ್ಲಿ 22,887 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಮಂಡ್ಯ ದಕ್ಷಿಣ- 6, ಮಂಡ್ಯ ಉತ್ತರ 13, ಮದ್ದೂರು 17, ಮಳವಳ್ಳಿ-13, ಕೆ.ಆರ್ ಪೇಟೆ-9, ನಾಗಮಂಗಲ-8, ಶ್ರೀ ರಂಗಪಟ್ಟಣ- 9, ಪಾಂಡವಪುರ-8 ಸೇರಿದಂತೆ ಒಟ್ಟು 83 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದರು.
ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಒಬ್ಬರಂತೆ 83 ಮುಖ್ಯಾ ಅಧೀಕ್ಷಕರನ್ನು ನೇಮಕಮಾಡಲಾಗಿದ್ದು, ಬ್ಲಾಕ್ ಹಂತದಲ್ಲಿ ಓರ್ವ ನೋಡಲ್ ಅಧಿಕಾರಿ ನೇಮಕ ಮಾಡಲಾಗಿದೆ. ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಲು ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿ.ಸಿ.ಟಿ.ವಿ ಅಳವಡಿಸಲಾಗಿದೆ ಎಂದರು.
ಎಲ್ಲಾ ಬ್ಲಾಕ್ ಗಳಲ್ಲಿ ಪ್ರಶ್ನೆಪತ್ರಿಕೆಗಳ ಬಂಡಲ್ ಗಳನ್ನು ಪರೀಕ್ಷಾ ಕೇಂದ್ರಗಳಿಗೆ ರವಾನಿಸಲು ಮಾರ್ಗಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಜಿಲ್ಲಾ ಹಂತದಲ್ಲಿ 03 ಸಂಚಾರಿ ಜಾಗೃತದಳ ಹಾಗೂ ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬ ಸ್ಥಾನಿಕ ಜಾಗೃತದಳ ಅಧಿಕಾರಿಯನ್ನು ನೇಮಿಸಲಾಗಿದೆ. ಎಲ್ಲಾ ಪರೀಕ್ಷಾ ಕಾರ್ಯಗಳು ಸುಗಮವಾಗಿ ನಡೆಯಲು ಎಲ್ಲಾ ಹಂತದಲ್ಲೂ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದರು.
ವಿಶೇಷ ಅಗತ್ಯತೆವುಳ್ಳ ಮಕ್ಕಳಿಗೆ ನೆಲ ಮಹಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕ ಅಧಿಕಾರ ಶಾಂತ ಎಲ್ ಹುಲ್ಮನಿ ಅವರು ಮಾತನಾಡಿ ಪರೀಕ್ಷಾ ಕೇಂದ್ರಗಳಲ್ಲಿ ಗೊಂದಲಗಳಿಗೆ ಅವಕಾಶ ಮಾಡಿಕೊಡದೆ ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸಿ ಎಂದರು.
ಕೊಠಡಿ ಮೇಲ್ವಿಚಾರಕರು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಮೊಬೈಲ್ ಫೋನ್ , ಎಲೆಕ್ಟ್ರಾನಿಕ್ ಸಾಧನಗಳನ್ನು ತರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದರು.
ಅಪರ ಜಿಲ್ಲಾಧಿಕಾರಿ ಡಾ.ಹೆಚ್ ಎಲ್ ನಾಗರಾಜು ಅವರು ಮಾತನಾಡಿ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಸಂಬಂಧಪಟ್ಟಂತೆ ಎಲ್ಲಾ ವರ್ಗದ ಅಧಿಕಾರಗಳು ತಮಗೆ ವಹಿಸಿರುವ ಜವಾಬ್ದಾರಿಯನ್ನು ನಿಭಾಯಿಸಿ ಸುಸೂತ್ರವಾಗಿ ಪರೀಕ್ಷೆ ನಡೆಸಿ ಎಂದರು.
ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್.ಟಿ ಜವರೇಗೌಡ ಸೇರಿದಂತೆ ಇನ್ನಿತರರು ಹಾಜರಿದ್ದರು.