ಏ.1ಹಾಗೂ ಏ.2 ರಂದು ಕೆ.ಪಿ.ಎಸ್.ಸಿ ಸ್ಪರ್ಧಾತ್ಮಕ ಪರೀಕ್ಷೆ
- TV10 Kannada Exclusive
- March 29, 2023
- No Comment
- 68
ಮಂಡ್ಯ,ಮಾ,29:-ಕೆ.ಪಿ.ಎಸ್.ಸಿ ವತಿಯಿಂದ ಏಪ್ರಿಲ್ 1 ಹಾಗೂ ಏಪ್ರಿಲ್ 2 ರಂದು ಜಿಲ್ಲೆಯಲ್ಲಿ ನಡೆಯಲಿರುವ ಗ್ರೂಪ್ ಸಿ ಹುದ್ದೆಯ ಕನ್ನಡ ಭಾಷಾ ಪರೀಕ್ಷೆ/ಸ್ಪರ್ಧಾತ್ಮಕ ಪರೀಕ್ಷೆ ಯನ್ನು ಸುಸೂತ್ರವಾಗಿ ನಡೆಸಿ ಎಂದು ಅಪರ ಜಿಲ್ಲಾಧಿಕಾರಿ ಡಾ.ಹೆಚ್ ಎಲ್ ನಾಗರಾಜು ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಪರೀಕ್ಷಾ ಸಂಬಂಧ ಸಭೆ ನಡೆಸಿ ಮಾತನಾಡಿದರು.
ಅಧಿಕಾರಿಗಳು ಕರ್ನಾಟಕ ಲೋಕಸೇವಾ ಆಯೋಗದ ಸೂಚನೆಯನ್ನು ಪಾಲನೆ ಮಾಡಿ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಿ, ಜೊತೆಗೆ ಯಾವುದೇ ಆಕ್ರಮಗಳು ನಡೆಯದಂತೆ ಕ್ರಮವಹಿಸಿ ಎಂದರು.
ಏಪ್ರಿಲ್ 1 ರಂದು ಬೆಳಿಗ್ಗೆ 11:00 ಗಂಟೆಯಿಂದ 12:00 ಗಂಟೆಯವರೆಗೆ ಕನ್ನಡ ಭಾಷಾ ಪರೀಕ್ಷೆ, ಏಪ್ರಿಲ್ 2 ರಂದು ಬೆಳಿಗ್ಗೆ 10:00 ಗಂಟೆಯಿಂದ 11:30 ಗಂಟೆವರೆಗೆ ಸಾಮಾನ್ಯ ಜ್ಞಾನ ಪರೀಕ್ಷೆ, ಹಾಗೂ ಮಧ್ಯಾಹ್ನ 2:00 ಗಂಟೆಯಿಂದ 4:00 ಗಂಟೆಯವರೆಗೆ ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲಿಷ್, ಕಂಪ್ಯೂಟರ್ ಜ್ಞಾನ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದರು.
ಪರೀಕ್ಷೆಯನ್ನು ಸುಲಲಿತವಾಗಿ ನಡೆಸಲು ಜಿಲ್ಲೆಯಲ್ಲಿ ತ್ರಿ ಸದಸ್ಯ ಸಮಿತಿ ನೇಮಕಮಾಡಲಾಗಿದೆ. ಜೊತೆಗೆ ಮಾರ್ಗಾಧಿಕಾರಿ, ನಿರೀಕ್ಷಣಾ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಎಲ್ಲಾ ಪರೀಕ್ಷಾ ಕಾರ್ಯಗಳು ಸುಗಮವಾಗಿ ನಡೆಯಲು ಎಲ್ಲಾ ಹಂತದಲ್ಲೂ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದರು.
ಕೊಠಡಿ ಮೇಲ್ವಿಚಾರಕರು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಮೊಬೈಲ್ ಫೋನ್ , ಎಲೆಕ್ಟ್ರಾನಿಕ್ ಸಾಧನಗಳನ್ನು ತರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಪರೀಕ್ಷೆ ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀ ಸುತ್ತಳತೆಯಲ್ಲಿ 144 ನೇ ಕಲಂ ಜಾರಿಗೊಳಿಸಿ, ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್, ಕಂಪ್ಯೂಟರ್ ಹಾಗೂ ಸೈಬರ್ ಅಂಗಡಿಗಳನ್ನು ಮುಚ್ಚಿಸಲು ಕ್ರಮವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳಿಗೆ ಉತ್ತೇಜನ ನೀಡುವಂತಹ ವ್ಯಕ್ತಿಗಳ ವಿರುದ್ಧ ದಂಡ ಪ್ರಕ್ರಿಯೆ ಸಂಹಿತೆ 1973ರ ಸೆಕ್ಷನ್ 107 ಮತ್ತು 110 ಅಡಿಯಲ್ಲಿ ಕ್ರಮವಹಿಸಲಾಗುವುದು ಎಂದರು.
ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್.ಟಿ ಜವರೇಗೌಡ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಉಮೇಶ್, ಆಯುಷ್ ವೈಧ್ಯಾಧಿಕಾರಿ ಸೀತಾಲಕ್ಷ್ಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕಿ ಎಸ್ ಹೆಚ್ ನಿರ್ಮಲ ಸೇರಿದಂತೆ ಇನ್ನಿತರರು ಹಾಜರಿದ್ದರು.