ಸಾಹಸಸಿಂಹ ಡಾ. ವಿಷ್ಣುವರ್ಧನ್ 76ನೇ ಜನ್ಮದಿನಾಚರಣೆ…ಉದ್ಭೂರು ಗೇಟ್ ಸ್ಮಾರಕದಲ್ಲಿ ಅದ್ಧೂರಿ ಕಾರ್ಯಕ್ರಮ…
- TV10 Kannada Exclusive
- September 15, 2026
- No Comment
- 20
ಸಾಹಸಸಿಂಹ ಡಾ. ವಿಷ್ಣುವರ್ಧನ್ 76ನೇ ಜನ್ಮದಿನಾಚರಣೆ…ಉದ್ಭೂರು ಗೇಟ್ ಸ್ಮಾರಕದಲ್ಲಿ ಅದ್ಧೂರಿ ಕಾರ್ಯಕ್ರಮ…
ಮೈಸೂರು,ಸೆ15,Tv10 ಕನ್ನಡ
ಸಾಹಸಸಿಂಹ, ಕರ್ನಾಟಕ ರತ್ನ ಡಾ. ವಿಷ್ಣುವರ್ಧನ್ ಅವರ 76ನೇ ಜನ್ಮದಿನಾಚರಣೆಯನ್ನು ಸೆಪ್ಟೆಂಬರ್ 18ರಂದು ಬೆಳಗ್ಗೆ 11:30ಕ್ಕೆ ಅದ್ಧೂರಿಯಾಗಿ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಉದ್ಬೂರ್ ಗೇಟ್ ಸಮೀಪವಿರುವ ಡಾ. ವಿಷ್ಣುವರ್ಧನ್ ಸ್ಮಾರಕದಲ್ಲಿ ಸುಮಾರು 5,000ಕ್ಕೂ ಹೆಚ್ಚು ಅಭಿಮಾನಿಗಳಿಗೆ ಸಾಂಪ್ರದಾಯಿಕ ಹೊಳಿಗೆ ಊಟದ ವ್ಯವಸ್ಥೆ ಮಾಡಲಾಗಿದೆ
ಹಾಗೂ ಲಯನ್ಸ್ ಜೀವದಾರ ರಕ್ತ ನಿಧಿ ಕೇಂದ್ರದ ವತಿಯಿಂದ
ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಸಹ ಆಯೋಜಿಸಲಾಗಿದೆ
ಎಂದು ಡಾ. ವಿಷ್ಣು ಸ್ಮಾರಕ ಸೇನಾ ಸಮಿತಿಯ ಅಧ್ಯಕ್ಷ ಬೆಂಕಿ ಮಹದೇವ್ ತಿಳಿಸಿದ್ದಾರೆ . ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕನ್ನಡ ಚಿತ್ರರಂಗದ ಮೇರು ನಟ, ಲಕ್ಷಾಂತರ ಅಭಿಮಾನಿಗಳ ಆರಾಧ್ಯ ದೈವವಾಗಿರುವ ಡಾ. ವಿಷ್ಣುವರ್ಧನ್ ಅವರ ಜನ್ಮದಿನವನ್ನು ಪ್ರತಿವರ್ಷದಂತೆ ಈ ಬಾರಿಯೂ ಡಾ. ವಿಷ್ಣು ಸ್ಮಾರಕ ಸೇವಾ ಸಮಿತಿ ವತಿಯಿಂದ ಸೇವಾ ಕಾರ್ಯಗಳ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದರು.ಡಾ. ವಿಷ್ಣುವರ್ಧನ್ ಅವರು ಕೇವಲ ಶ್ರೇಷ್ಠ ನಟರಷ್ಟೇ ಅಲ್ಲ, ಸಮಾಜಮುಖಿ ಚಿಂತನೆ, ಮಾನವೀಯ ಮೌಲ್ಯಗಳು ಹಾಗೂ ಸರಳ ವ್ಯಕ್ತಿತ್ವದ ಮೂಲಕ ಜನಮನ ಗೆದ್ದ ಮಹಾನ್ ವ್ಯಕ್ತಿತ್ವವಾಗಿದ್ದರು. ಅವರ ಆದರ್ಶಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಉದ್ದೇಶದಿಂದ ಜನ್ಮದಿನಾಚರಣೆಯನ್ನು ವಿಶೇಷವಾಗಿ ಆಯೋಜಿಸಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಕಲಾ ಸೇವೆ, ಕನ್ನಡ ಚಿತ್ರರಂಗಕ್ಕೆ ನೀಡಿದ ಅಮೋಘ ಕೊಡುಗೆ ಹಾಗೂ ಸಮಾಜಮುಖಿ ಕಾರ್ಯಗಳನ್ನು ಸ್ಮರಿಸಲಾಗುವುದು. ವಿವಿಧ ಕ್ಷೇತ್ರಗಳ ಗಣ್ಯರು, ಕಲಾವಿದರು, ಸಮಾಜಸೇವಕರು, ಸಂಘ-ಸಂಸ್ಥೆಗಳ ಮುಖಂಡರು ಹಾಗೂ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಶಾಸಕರುಗಳಾದ ಜಿ.ಟಿ. ದೇವೇಗೌಡ, ಜಿ.ಡಿ. ಹರೀಶ್ ಗೌಡ , ಟಿ ಎಸ್ ಶ್ರೀವತ್ಸ , ಮಾಜಿ ಶಾಸಕ ನಾಗೇಂದ್ರ, ಕಾಂಗ್ರೆಸ್ ಮುಖಂಡರಾದ ಚೇತನ್ ವಿಷಕಂಠ, ಊರಿಗೆ ಉಪಕಾರಿ ವಿಷ್ಣುವರ್ಧನ್ ಅಭಿಮಾನಿಗಳ ಸಂಘದ ಅಧ್ಯಕ್ಷ ಎಂ ಜಿ ಆರ್ ಮಣಿ, ಹಾಗೂ ಖ್ಯಾತ ಚಲನಚಿತ್ರ ನಟ ಸುಂದರ್ ರಾಜ್ ಸೇರಿದಂತೆ ಹಲವಾರು ಗಣ್ಯರು ಆಗಮಿಸಲಿದ್ದು, ಚಲನಚಿತ್ರ ಮತ್ತು ರಂಗಭೂಮಿ ಕ್ಷೇತ್ರದ ಹಲವು ಕಲಾವಿದರು ಸಹ ಉಪಸ್ಥಿತರಿರಲಿದ್ದಾರೆ ಎಂದು ಮಾಹಿತಿ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘಟಕರು, ಡಾ. ವಿಷ್ಣುವರ್ಧನ್ ಅವರ ಜನ್ಮದಿನವನ್ನು ಕೇವಲ ಆಚರಣೆಯಾಗಿ ಮಾತ್ರವಲ್ಲದೆ, ಸಮಾಜ ಸೇವೆಯ ಸಂಕಲ್ಪದೊಂದಿಗೆ ನಡೆಸಲಾಗುತ್ತಿದೆ. ಆದ್ದರಿಂದ ಸಾರ್ವಜನಿಕರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಡಾ. ವಿಷ್ಣು ಸ್ಮಾರಕ ಸೇನಾ ಸಮಿತಿಯ ಗೌರವಾಧ್ಯಕ್ಷೆ ಶಾಂತಕುಮಾರಿ, ಎಂ ಡಿ ಪಾರ್ಥಸಾರಥಿ ಅಧ್ಯಕ್ಷ ಬೆಂಕಿ ಮಹದೇವ್, ಉಪಾಧ್ಯಕ್ಷ ಸಂತೋಷ್ ಎಸ್., ಪ್ರಧಾನ ಕಾರ್ಯದರ್ಶಿ ರಾಜು ಎಸ್.ಆರ್., ಸಹ ಕಾರ್ಯದರ್ಶಿ ಮಹದೇವಸ್ವಾಮಿ, ಮಾರ್ಗದರ್ಶಕರಾದ ಜೀವಧಾರ ರಕ್ತನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ಸೇರಿದಂತೆ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.